ಬೆಳಗಾವಿ ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಡೆ ಹಳ್ಳಿಯ ಕಡೆ
“ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ

ಬೆಳಗಾವಿ ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜಿಲ್ಲೆಯ ಹೊಸ ತಾಲ್ಲೂಕು ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ ತಮ್ಮ ಮೊದಲ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಿದರು.
ಹೊಸ ತಾಲ್ಲೂಕಿನ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ತಮ್ಮ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಆಶಯದಂತೆ ಮೂರನೇ ಶನಿವಾರವಾದ ಇಂದು(ಜೂ.18) ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಆಗಮಿಸಿದರು.
ಮೊದಲ ಬಾರಿ ತಮ್ಮ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಊರ ದ್ವಾರದ ಬಳಿಯೇ ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು.
ಅಲ್ಲಿಂದ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದವರೆಗೆ ನಡೆದುಕೊಂಡ ಹೋದ ಜಿಲ್ಲಾಧಿಕಾರಿ ನಿತೇಶ ಪಾಟೀಲರು, ಮಾರ್ಗಮಧ್ಯದಲ್ಲಿ ಸರಕಾರಿ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಸಸಿಯನ್ನು ನೆಟ್ಟರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪೋಷಣ ಅಭಿಯಾನ ಮತ್ತು ಪೌಷ್ಟಿಕ ಆಹಾರ ಶಿಬಿರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆಲ ಮಕ್ಕಳಿಗೆ ಸ್ವತಃ ಪೌಷ್ಟಿಕ ಸಿಹಿತಿನಿಸುಗಳನ್ನು ತಿನಿಸಿದರು. ಇದಲ್ಲದೇ ಆರೋಗ್ಯ ಇಲಾಖೆಯ ವತಿಯಿಂದ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳವನ್ನು ವೀಕ್ಷಿಸಿದರು. ಸುಮಾರು 120 ಜನರಿಗೆ ನೇತ್ರ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 10 ಜನರಿಗೆ ಕನ್ನಡಕವನ್ನು ಜಿಲ್ಲಾಧಿಕಾರಿಗಳು ವಿತರಿಸಿದರು.
ಅಕ್ರಮ-ಸಕ್ರಮ-ಅರ್ಜಿ ಸಲ್ಲಿಸಲು ಸೂಚನೆ:
ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ರಸ್ತೆ-ಗಟಾರುಗಳ ನಿರ್ಮಿಸಬೇಕು ಎಂದು ಅನೇಕ ಜನರು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಅವರು, ಈ ಬಗ್ಗೆ ತಕ್ಷಣವೇ ಅಗತ್ಯ ಕ್ರಮಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸರಕಾರಿ ಜಾಗೆಯಲ್ಲಿ ನಿರ್ಮಿಸಲಾಗಿರುವ ಮನೆಗಳಿಗೆ ಹಕ್ಕುಪತ್ರವನ್ನು ನೀಡಬೇಕು ಎಂದು ಕೆಲವರು ಮನವಿ ಮಾಡಿಕೊಂಡರು. ಅಕ್ರಮ-ಸಕ್ರಮ ಯೋಜನೆಯಡಿ ನಿಯಮಾವಳಿ ಪ್ರಕಾರ ಅರ್ಜಿ ಸಲ್ಲಿಸಿದರೆ ಈ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಂಡು ಅನುಕೂಲ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
ಹನಿ ನೀರಾವರಿ ಸೌಲಭ್ಯ ಒದಗಿಸುವಂತೆ ಗ್ರಾಮದ ಕೆಲವರಿಂದ ಬೇಡಿಕೆ ಕೇಳಿಬಂತು. ಇದಕ್ಕೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿಯೇ ಅರ್ಜಿ ನಮೂನೆಗಳನ್ನು ವಿತರಿಸಿದರಲ್ಲದೇ ಅವುಗಳನ್ನು ಭರ್ತಿ ಮಾಡಿಸಿ ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನೀಡಿದರು. ಆದಷ್ಟು ಬೇಗನೆ ಸೌಲಭ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ಕೂಡ ನೀಡಿದರು.
ಇದೇ ಸಂದರ್ಭದಲ್ಲಿ ಕೆಲವು ಮಹಿಳೆಯರಿಗೆ ವಿಧವಾವೇತನ ಪ್ರಮಾಣಪತ್ರಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿತರಿಸಿದರು. ಗ್ರಾಮಸ್ಥರ ಲಿಖಿತ ಮನವಿಗಳನ್ನು ಸ್ವೀಕರಿಸಿದ ಅವರು, ರಸ್ತೆ, ಗಟಾರು ನಿರ್ಮಾಣ; ವಸತಿ ಸೌಕರ್ಯ ಒದಗಿಸುವುದು ಸೇರಿದಂತೆ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಅವುಗಳನ್ನು ತಕ್ಷಣವೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮೂಲಕ ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ, ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರಾಮದ ಹಿರಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಭೈರನಟ್ಟಿಯಲ್ಲಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಬಳಿಕ ಮೂಡಲಗಿ ತಾಲ್ಲೂಕು ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿನ ತಹಶಿಲ್ದಾರ ಕಚೇರಿಯ ಆವರಣದಲ್ಲಿ “ಭೂಮಿ ಕೇಂದ್ರ”ದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.