Karnataka NewsPolitics
ಎಸಿಬಿ ದಾಳಿ ವಿರೋಧಿಸಿ ಜಮೀರ್ ಅಹಮ್ಮದ್ ಬೆಂಬಲಿಗರ ಪ್ರತಿಭಟನೆ

ಬೆಂಗಳೂರು : ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿದರು.
ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಜಮೀರ್ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಮನೆಯ ಮುಂದೆ ಸೇರಿರುವ ಅವರ ಬೆಂಬಲಿಗರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
‘ಜಮೀರ್ ಅಹಮ್ಮದ್ ಅವರು ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರಿಗೆ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿವೆ. ಹಿಂದೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಈಗ ಎಸಿಬಿ ದಾಳಿ ನಡೆದಿದೆ. ಇದರ ಹಿಂದೆ ರಾಜಕೀಯವಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.