ಮುಂದುವರಿದ ಮಳೆಯ ಅಬ್ಬರ, 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್; ಹಲವೆಡೆ ಶಾಲೆಗಳಿಗೆ ರಜೆ

ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಬಹುತೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾಸನದಲ್ಲಿ ಶಾಲೆಗಳಿಗೆ ರಜೆ
ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಮೂರು ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಡಿಸಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ. ಕಳೆದ ಎಂಟು ದಿನಗಳಿಂದ ಎಡೆಬಿಡದ ಸುರಿಯುತ್ತಿರುವ ವರ್ಷಧಾರೆಯಿಂದ ಶಾಲಾ ಮಕ್ಕಳಿಗೆ ಅನಾನುಕೂಲ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಕೃಷಿ ಕ್ಷೇತ್ರಗಳು ಮತ್ತು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿಯೂ ಭೂಕುಸಿತ ವರದಿಯಾಗಿದೆ. ಮಹಾರಾಷ್ಟ್ರ ಮತ್ತು ಗೋವಾವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಗಳ ಸಂಚಾರಕ್ಕೆ ಪರಿಣಾಮ ಬೀರಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ ವರದಿಯಾಗಿದೆ. ಕೊಡಗು ಜಿಲ್ಲೆಯು ಕೆಲವು ಪ್ರಮುಖ ಸಂಪರ್ಕ ರಸ್ತೆಗಳೊಂದಿಗೆ ಭೂಕುಸಿತ ಆಗಿದೆ.
ಕಡಿಲಿಗೆ ಇಳಿಯದಂತೆ ಸೂಚನೆ
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಭಾನುವಾರ ನೀರಿನ ಮಟ್ಟ 8.5 ಮೀಟರ್‌ಗೆ ಏರಿಕೆಯಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬಂಟ್ವಾಳ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನದಿ ಪಾತ್ರದ ಎಲ್ಲಾ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನದಿ ದಡದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಪ್ರಾಣಾಪಾಯವನ್ನು ತಪ್ಪಿಸಲು ಮೀನುಗಾರರು ಮತ್ತು ಪ್ರವಾಸಿಗರು ಸಮುದ್ರ ಅಥವಾ ಕಡಲತೀರಗಳ ಬಳಿ ಹೋಗದಂತೆ ಸೂಚಿಸಲಾಗಿದೆ.
ಈವರೆಗೆ 12 ಮಂದಿ ಸಾವು
ಇದೇ ವೇಳೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಭಾಗಗಳಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಸಿಹಿತ್ಲು, ಉಚ್ಚಿಲ, ಉಳ್ಳಾಲ ಮತ್ತು ಬಟ್ಪಾಡಿಯಲ್ಲಿ ಕರಾವಳಿಯಲ್ಲಿ ಭಾರಿ ಹಾನಿ ಸಂಭವಿಸಿದ್ದು, ಮರವಂತೆ, ಕಾಪು, ಪಡುಬಿದ್ರಿ, ಶೀರೂರು, ಉಡುಪಿಯ ಕಿರಿಮಂಜೇಶ್ವರ ಸೇರಿದಂತೆ ಹಲವೆಡೆ ಹಾನಿಯಾಗಿದೆ. ಜೂನ್ 1 ರಿಂದ ಇಲ್ಲಿಯವರೆಗೆ ವಿವಿಧ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 12 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.