Karnataka NewsPolitics
ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಬೆಳಗಾವಿ: ವಿವಿಧ ಇಲಾಖೆಗಳ ಸಮನ್ವಯ ಸಭೆ; ಡಿಸಿ ಖಡಕ್ ವಾರ್ನಿಂಗ್

ಬೆಳಗಾವಿ : ದಂಡು ಪ್ರದೇಶ(ಕ್ಯಾಂಟೋನ್ಮೆಂಟ್) ಸೇರಿದಂತೆ ನಗರದ ಯಾವುದೇ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು, ವಿದ್ಯುತ್ ವ್ಯತ್ಯಯ ಸೇರಿದಂತೆ ಯಾವುದೇ ಸಮಸ್ಯೆಗಳು ಕಂಡುಬಂದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ(ಜು.26) ನಡೆದ ಮಹಾನಗರ ಪಾಲಿಕೆ, ದಂಡು ಮಂಡಳಿ ಮತ್ತಿತರ ಇಲಾಖೆಗಳ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.
ನಗರದಲ್ಲಿ ಕುಡಿಯುವ ನೀರು ಪೂರೈಕೆ, ವಿದ್ಯುತ್ ವ್ಯತ್ಯಯ, ಪಾರ್ಕಿಂಗ್ ಸಮಸ್ಯೆ, ಕಾಮಗಾರಿಗಳ ವಿಳಂಬ ಹೀಗೆ ಹಲವಾರು ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಇಂತಹ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ಜನರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು.
ನಗರದಲ್ಲಿ ನಿರಂತರ ನೀರು(24×7) ಪೂರೈಕೆ ಯೋಜನೆಯ ಕಾಮಗಾರಿಗಳು ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂಬ ದೂರುಗಳು ಬರುತ್ತಿವೆ.
ಆದ್ದರಿಂದ ಮಹಾನಗರ ಪಾಲಿಕೆ, ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ದಂಡು ಮಂಡಳಿಯ ಅಧಿಕಾರಿಗಳು ಮತ್ತು ಯೋಜನೆಯನ್ನು ನಿರ್ವಹಿಸುತ್ತಿರುವ ಎಲ್ ಆ್ಯಂಡ್ ಟಿ ಕಂಪನಿಯವರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನಿರಂತರ ನೀರು ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಇದೇ ವೇಳೆ ರಸ್ತೆ ದುರಸ್ತಿ ಮತ್ತಿತರ ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು.
ಮಳೆ-ಗಾಳಿಯಿಂದ ಗಿಡಮರಗಳು ಬಿದ್ದು ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ತೆರವುಗೊಳಿಸಬೇಕು ಹಾಗೂ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.
ಇದಲ್ಲದೇ ಪಾರ್ಕಿಂಗ್ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪರಸ್ಪರ ಸಹಕರಿಸುವ ಮೂಲಕ ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ದಂಡು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಹೆಸ್ಕಾಂ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ದಂಡು ಮಂಡಳಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.